ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ಮೇ 15, 2013

ರಾಷ್ಟ್ರೀಯ ಕಾರ್ಯಕ್ರಮಗಳು ರಾಜಕೀಯ ಕಾರ್ಯಕ್ರಮಗಳಾಗದಿರಲಿ!


     ೧೯೭೫-೭೭ರ ತುರ್ತು ಪರಿಸ್ಥಿತಿ ಕಾಲದಲ್ಲಿ, ಪತ್ರಿಕಾ ಸೆನ್ಸಾರ್ ಜಾರಿಯಲ್ಲಿದ್ದ ಕಾಲದಲ್ಲಿ ಪತ್ರಿಕೆಗಳು ಮತ್ತು ರೇಡಿಯೋಗಳಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಅಂದಿನ ಪ್ರಧಾನಿ ಇಂದಿರಾಗಾಂಧಿಯ ಗುಣಗಾನ ಬಿಟ್ಟರೆ ಕಾಂಗ್ರೆಸ್ ವಿರೋಧಿ ಸುದ್ದಿಗಳಿಗೆ ಅವಕಾಶವೇ ಇರಲಿಲ್ಲ. ಆಗ ಕೇಳಿ ಬರುತ್ತಿದ್ದ ಒಂದು ಪ್ರಚಾರ ಗೀತೆ -'ಇಂದಿರಾಗಾಂಧಿಯ ಇಪ್ಪತ್ತಂಶದ ಕಾರ್ಯಕ್ರಮ, ಜನತೆಗೆ ಮಾಡಿದೆ ಬಾಳ್ ಸುಗಮ'- ಎಲ್ಲರಿಗೂ ಬಾಯಿಪಾಠವಾಗಿತ್ತು. ಆ ಇಪ್ಪತ್ತಂಶದ ಕಾರ್ಯಕ್ರಮಗಳಿಗೆ ಬೇಕಾದ ಹಣ ಬರುತ್ತಿದ್ದುದು ಸರ್ಕಾರದ ಖಜಾನೆಯಿಂದ, ಇಂದಿರಾಗಾಂಧಿಯವರಿಂದಲಾಗಲೀ, ಕಾಂಗ್ರೆಸ್ ಪಕ್ಷದಿಂದಲಾಗಲೀ ಅಲ್ಲ. ಹೆಸರು ಮಾತ್ರ ಅವರದು. ಅಲ್ಲಿಂದ ಪ್ರಾರಂಭವಾದ ಈ ಕೆಟ್ಟ ಪರಂಪರೆ ದೇಶವನ್ನು ಅಧೋಗತಿಗೆ ಒಯ್ಯುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ಘೋಷಿಸುವ ಕಾರ್ಯಕ್ರಮಗಳನ್ನು ಅಧಿಕಾರಕ್ಕೆ ಬಂದ ನಂತರದಲ್ಲಿ ತಮ್ಮ ನೇತಾರರುಗಳ ಹೆಸರಿನಲ್ಲಿ ಜಾರಿಗಳಿಸಲು ಪ್ರಾರಂಭಿಸಿದವು. ಹಿಂದಿದ್ದ ಯೋಜನೆ, ಕಾರ್ಯಕ್ರಮಗಳನ್ನೇ ಅಲ್ಪ ಸ್ವಲ್ಪ ಬದಲಾವಣೆಗಳನ್ನು ಮಾಡಿ ತಮ್ಮದೇ ಕಾರ್ಯಕ್ರಮವೆಂಬಂತೆ ಬಿಂಬಿಸತೊಡಗಿದವು. ಇಂದು ಇಂದಿರಾಗಾಂಧಿ ಮತ್ತು ರಾಜೀವಗಾಂಧಿಯವರ ಹೆಸರಿನಲ್ಲಿ ದೇಶದಲ್ಲಿ ಎಷ್ಟು ಸರ್ಕಾರಿ ಸಂಸ್ಥೆಗಳು, ಯೋಜನೆಗಳು, ಕಟ್ಟಡಗಳು ಇವೆಯೋ ಅದರ ಲೆಕ್ಕ ಯಾರಿಗೂ ತಿಳಿದಿರಲಾರದು. ಕಾಂಗ್ರೆಸ್ಸೇತರ ಸರ್ಕಾರಗಳ ಕಥೆಯೂ ಇದೇ. ರಾಜ್ಯ ಸರ್ಕಾರಗಳೂ ಕೇಂದ್ರ ಸರ್ಕಾರದ ಹಿರಿಯಕ್ಕನ ಚಾಳಿಯನ್ನೇ ಮುಂದುವರೆಸಿಕೊಂಡು ಬರುತ್ತಿವೆ. ಜನಸಾಮಾನ್ಯನ ಪ್ರಾಥಮಿಕ ಅವಶ್ಯಕತೆಗಳನ್ನು ಪೂರೈಸುವುದಾದರೂ, ಸಂವಿಧಾನ ಬದ್ಧ ಕರ್ತವ್ಯಗಳನ್ನು ನಿರ್ವಹಿಸುವುದಾದರೂ ಅವುಗಳಿಗೆ ಪಕ್ಷಗಳ ಸಾಧನೆಯೆಂಬಂತೆ ಬಿಂಬಿಸುವ ಪ್ರವೃತ್ತಿ ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. 
     ಜನಸಾಮಾನ್ಯರ ಪ್ರಾಥಮಿಕ ಅಗತ್ಯತೆಗಳಾದ ಕುಡಿಯುವ ನೀರು ಒದಗಿಸುವುದು, ಉತ್ತಮ ಶಿಕ್ಷಣ ಎಲ್ಲರಿಗೂ ಸಿಗುವಂತೆ ನೋಡಿಕೊಳ್ಳುವುದು, ಮೂಲಭೂತ ಸೌಕರ್ಯಗಳಾದ ಸಂಪರ್ಕ ರಸ್ತೆಗಳು, ಚರಂಡಿಗಳ ನಿರ್ಮಾಣ ಮತ್ತು ನಿರ್ವಹಣೆ, ಉತ್ತಮ ಆರೋಗ್ಯ ಪಾಲನೆ ಮತ್ತು ಸುಯೋಗ್ಯ ಚಿಕಿತ್ಸಾ ವ್ಯವಸ್ಥೆ, ಇತ್ಯಾದಿ ಹಲವು ಪ್ರಾಥಮಿಕ ಅಂಶಗಳನ್ನು ಮುಂದಿಟ್ಟುಕೊಂಡು ಎಲ್ಲಾ ರಾಜಕೀಯ ಪಕ್ಷಗಳವರೂ ಒಟ್ಟಾಗಿ ದೇಶಕ್ಕೆ ಒಂದು ಸಾಮಾನ್ಯ ಕಾರ್ಯಕ್ರಮ ರೂಪಿಸಬೇಕು. ಯಾವುದೇ ಪಕ್ಷದ ಸರ್ಕಾರ ಬಂದರೂ ಈ ಸಾಮಾನ್ಯ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕಾದುದು ಅವುಗಳ ಮೂಲಭೂತ ಜವಾಬ್ದಾರಿಯಾಗಬೇಕು. ಈ ಕಾರ್ಯಕ್ರಮಗಳನ್ನು ಬದಲಾವಣೆ ಮಾಡಿ ಕಾಂಗ್ರೆಸ್ ಕಾರ್ಯಕ್ರಮ, ಬಿಜೆಪಿ ಕಾರ್ಯಕ್ರಮ, ಕಮ್ಯುನಿಸ್ಟ್ ಕಾರ್ಯಕ್ರಮ ಎಂದು ಹೇಳಬಾರದು. ಎಲ್ಲಾ ರಾಜಕೀಯ ಪಕ್ಷಗಳ ಅಧ್ಯಕ್ಷರುಗಳು ಈ ಸಾಮಾನ್ಯ ಕಾರ್ಯಕ್ರಮಗಳಿಗೆ ಬದ್ಧರಾಗಿರುತ್ತೇವೆಂದು ಸಹಿ ಮಾಡಬೇಕು. ನಮ್ಮ ಚುನಾವಣಾ ಆಯೋಗ ಇದನ್ನು ಏಕೆ ಕಡ್ಡಾಯ ಮಾಡಬಾರದು? ಚುನಾವಣಾ ಸಮಯಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಂತಹ ಪ್ರಕರಣಗಳು ಆಗ ಗಣನೀಯವಾಗಿ ಕಡಿಮೆಯಾದಾವು. ಜನರನ್ನು ಸೋಮಾರಿಗಳನ್ನಾಗಿಸುವ ಅಗ್ಗದ ಕಾರ್ಯಕ್ರಮಗಳಿಗೆ ಕಡಿವಾಣ ಬೀಳಬೇಕು. 'ಯಾರದೋ ದುಡ್ಡು, ಎಲ್ಲಮ್ಮನ ಜಾತ್ರೆ' ಎಂಬ ಗಾದೆಯಂತೆ ಈಗ ಜಾರಿಗೆ ತರಲು ಉದ್ದೇಶಿಸಿರುವ ಒಂದು ರೂಪಾಯಿಗೆ ೧ ಕೆ.ಜಿ. ಅಕ್ಕಿಯ ಕಾರ್ಯಕ್ರಮ (ಇದಕ್ಕೊಂದು ಪುಕ್ಕಟೆ ಪ್ರಚಾರ ಪಡೆಯುವ ಹೆಸರು ಇಡುತ್ತಾರೆ) ಸಹ ಮತಗಳಿಕೆಯ, ಜನರನ್ನು ಓಲೈಸುವ, ಸೋಮಾರಿಗಳನ್ನಾಗಿಸುವ, ಪ್ರಗತಿಯ ಬದಲು ಅವನತಿಗೆ ಜಾರಿಸುವ ಅಗ್ಗದ ಜನಪ್ರಿಯ ಕಾರ್ಯಕ್ರಮವೆನ್ನದೆ ವಿಧಿಯಿಲ್ಲ. ಇಂತಹ ಕಾರ್ಯಕ್ರಮಗಳು, ಯೋಜನೆಗಳನ್ನು ಮಾಡಬಯಸಿದರೆ ರಾಜಕೀಯ ಪಕ್ಷಗಳು, ರಾಜಕೀಯ ಪುಡಾರಿಗಳು ಅವರದೇ ಹಣ ಬಳಸಿ ಮಾಡಲಿ ಮತ್ತು ಅವರ ಹೆಸರುಗಳನ್ನೇ ಬಳಸಲಿ. 
     ಯಾವುದೇ ಒಬ್ಬ ವ್ಯಕ್ತಿ ಹಳ್ಳಿಯೊಂದರಲ್ಲಿ ಸಾಯುವ ಸ್ಥಿತಿಯಲ್ಲಿದ್ದಾನೆ ಎಂದರೆ ಅವನನ್ನು ರಕ್ಷಿಸುವ ಹೊಣೆ ಸರ್ಕಾರದ್ದಾಗಿರುತ್ತದೆ. ಅವನು ಕಾಂಗ್ರೆಸ್ ಪಕ್ಷದವನು, ಬಿಜೆಪಿಯವನು, ಕಮ್ಯೂನಿಸ್ಟ್, ಸಮಾಜವಾದಿ ಪಕ್ಷದವನು, ಆ ಜಾತಿಯವನು, ಈ ಧರ್ಮದವನು, ಇತ್ಯಾದಿ ನೋಡಬೇಕೇ? ಉತ್ತಮ ನೈರ್ಮಲ್ಯ ಪಾಲನೆಗೂ, ಒಳ್ಳೆಯ ಸಂಪರ್ಕ ಸಾಧನಗಳನ್ನು ಕಲ್ಪಿಸುವುದಕ್ಕೂ ರಾಜಕೀಯ ಬೆರೆಸಬೇಕೇ? ಕೆಲವು ಮಕ್ಕಳು ಕಾರುಗಳಲ್ಲಿ ಶಾಲೆಗಳಿಗೆ ಹೋಗುತ್ತಿದ್ದರೆ, ಕೆಲವರು ಶಿಕ್ಷಣ ವಂಚಿತರಾಗಿ ತುತ್ತು ಕೂಳಿಗೂ ಪರದಾಡುವ ಸ್ಥಿತಿಯಲ್ಲಿರಬೇಕೇ? ಹೆಚ್ಚಿನ ಆರೋಗ್ಯದ ಸಮಸ್ಯೆಗಳು ಉಂಟಾಗುವುದು ಒಳ್ಳೆಯ ಕುಡಿಯುವ ನೀರಿನ ಪೂರೈಕೆಯ ಕೊರತೆಯಿಂದಲ್ಲವೇ? ಕುಡಿಯುವ ನೀರಿನ ಪೂರೈಕೆ ಒದಗಿಸುವುದು ಎಲ್ಲಾ ಸರ್ಕಾರಗಳ ಕರ್ತವ್ಯವಲ್ಲವೇ? ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಮತ  ನೀಡಿದರೆ ಮಾತ್ರ ಈ ಸಮಸ್ಯೆಗೆ ಪರಿಹಾರ ಸಿಗುವುದೆಂದು ಹೇಳಿ ಮತ ಕೇಳುವುದು ಎಷ್ಟು ಸರಿ? ನೈರ್ಮಲ್ಯದ ಸಮಸ್ಯೆಗೆ ಪರಿಹಾರ ರೂಪಿಸುವುದಕ್ಕೆ ಯಾವ ಕಾನೂನು ಬೇಕು? ಯಾವ ಕ್ರಾಂತಿ ಆಗಬೇಕು? ಮಾಡಬೇಕೆಂಬ ಮನಸ್ಸು ಇದ್ದರೆ ಸಾಕಲ್ಲವೇ? ಇಂತಹ ಸಂಗತಿಗಳನ್ನು ಸೇರಿಸಿ ಒಂದು ಸಾಮಾನ್ಯ ರಾಷ್ಟ್ರೀಯ ಕಾರ್ಯಕ್ರಮ ರೂಪಿಸಲು ಒತ್ತಡ ತರಬೇಕಿದೆ. ರಾಜಕೀಯ ಧುರೀಣರ, ಪಕ್ಷಗಳ ನಾಯಕರ ಹೆಸರಿನಲ್ಲಿ ಸರ್ಕಾರದ ಹಣ ಬಳಸಿ ವಿವಿಧ ಸರ್ಕಾರಿ ಯೋಜನೆಗಳಿಗೆ ಅವರುಗಳ ಹೆಸರಿಡುವುದನ್ನು ಮೊದಲು ನಿಷೇಧಿಸಬೇಕು. ಈಗ ಅಂತಹ ರಾಜಕೀಯ ನಾಯಕರುಗಳ ಹೆಸರಿನಲ್ಲಿ ಇರುವ ಸರ್ಕಾರೀ ಸಂಸ್ಥೆಗಳ ಹೆಸರುಗಳಲ್ಲಿ ಸ್ವಾತಂತ್ರ್ಯಾನಂತರದ ರಾಜಕೀಯ ನಾಯಕರ ಹೆಸರುಗಳನ್ನು ಕಿತ್ತುಹಾಕಬೇಕು. ಚುನಾವಣಾ ಆಯೋಗ ಮತ್ತು ಜನಸಾಮಾನ್ಯರ ಹಿತ ಬಯಸುವ ನೇತಾರರು ಇತ್ತ ಗಮನ ಹರಿಸಬೇಕು.
     ಇಂತಹ ಅಗ್ಗದ ಪ್ರಚಾರ ಪಡೆದುಕೊಳ್ಳುವ ಪ್ರವೃತ್ತಿ ಇಂದು ಯಾವ ಹಂತಕ್ಕೆ ತಲುಪಿದೆಯೆಂದರೆ ಸಂಸದರ, ಶಾಸಕರ ಹೆಸರಿನಲ್ಲಿ ಸರ್ಕಾರಿ ಅನುದಾನಗಳು ಬಿಡುಗಡೆಯಾಗುತ್ತವೆ. ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿಯೂ ಕೂಡ ಸದಸ್ಯರ ಹೆಸರುಗಳಲ್ಲಿ, ಅವರುಗಳು ಬಯಸಿದಂತೆ ಅನುದಾನಗಳು ಬಿಡುಗಡೆಯಾಗುತ್ತವೆಯೇ ಹೊರತು ಜನರ ಅಗತ್ಯ, ಅವಶ್ಯಕತೆಗಳಿಗನುಸಾರವಾಗಿ ಅಲ್ಲ. ಅದರಲ್ಲೂ ರಾಜಕೀಯ ತಾರತಮ್ಯವಿರುತ್ತದೆ. ಅವರುಗಳು ಬಯಸುವ ಕಾರ್ಯಕ್ರಮಗಳಿಗೆ ಮಾತ್ರ ಅವುಗಳು ಬಳಕೆಯಾಗುತ್ತಿವೆ. ಸಮುದಾಯ ಭವನದ ಹೆಸರಿನಲ್ಲಿ ಕಟ್ಟುವ ಕಟ್ಟಡಗಳಿಗೂ ಸಹ ಅಂತಹ ಹಣ ಹೋಗುತ್ತಿದೆ. ನಂತರದಲ್ಲಿ ಅವು ಕಲ್ಯಾಣ ಮಂಟಪಗಳಾಗಿ ಖಾಸಗಿಯವರು ಹಣ ಮಾಡಿಕೊಳ್ಳುವುದರಲ್ಲಿ ಅಂತ್ಯವಾಗುತ್ತಿದೆ. ಕೇವಲ ಮತಗಳಿಕೆ ದೃಷ್ಟಿಯಿಂದ ಅಗ್ಗದ ಜನಪ್ರಿಯ ಕಾರ್ಯಕ್ರಮಗಳು ಜಾರಿಯಾಗುತ್ತಿದ್ದು, ಅವುಗಳಿಂದ ಸರ್ಕಾರದ ಬೊಕ್ಕಸದಿಂದ ಜನಸಾಮಾನ್ಯರ ಕೋಟಿಗಟ್ಟಲೆ ಹಣ ಲೂಟಿಯಾಗುತ್ತಿದೆ. ಇಂತಹ ಕಾರ್ಯಕ್ರಮಗಳು ನೈಜ ಫಲಾನುಭವಿಗಳಿಗೆ ತಲುಪುವುದರಲ್ಲಿ ಎಷ್ಟರಮಟ್ಟಿಗೆ ಸಫಲವಾಗುತ್ತವೆ ಎಂಬುದು ಎಲ್ಲರಿಗೂ ತಿಳಿದದ್ದೇ.
     ಅಣ್ಣಾ ಹಜಾರೆಯವರು ಒಮ್ಮೆ ಮಾತನಾಡುತ್ತಾ, "ಆಡಳಿತದಲ್ಲಿ ಜನರು ಪಾಲುಗೊಳ್ಳುವುದು ಎಂದರೆ ಏನು?" ಎಂದು ಪ್ರಶ್ನಿಸಿ ತಾವೇ ಕೊಟ್ಟಿದ್ದ ಉತ್ತರವೆಂದರೆ, "ಆಡಳಿತದಲ್ಲಿ ಜನರು ಪಾಲುಗೊಳ್ಳುವುದು ಅನ್ನುವುದು ಸರಿಯಲ್ಲ; ಜನರ ಕಾರ್ಯಕ್ರಮದಲ್ಲಿ ಸರ್ಕಾರ ಪಾಲುಗೊಳ್ಳುವುದು." ಹೀಗಾಗಬೇಕೆಂದರೆ ಜನರು ಜಾಗೃತರಾಗಿರಬೇಕು. ರಾಜಕೀಯ ನಾಯಕರುಗಳು ಜನರ 'ನಾಯಕ'ರಾಗದೆ, 'ಸೇವಕ'ರಾಗಬೇಕು. ಸರ್ವಸಮ್ಮತ, ಮೂಲಭೂತ ಅತ್ಯಗತ್ಯ ಜನಪರ ಕಾರ್ಯಕ್ರಮಗಳು ಯಾವುದೇ ರಾಜಕೀಯ ಪಕ್ಷದ, ನೇತಾರರ ಕಾರ್ಯಕ್ರಮಗಳೆನಿಸದೆ ರಾಷ್ಟ್ರೀಯ ಕಾರ್ಯಕ್ರಮಗಳೆನಿಸಲಿ; ಈ ಕುರಿತು ಜನಜಾಗೃತಿ ಮೂಡಿಸುವ ಕೆಲಸ ಎಲ್ಲಾ ಪ್ರಜ್ಞಾವಂತರು ಮಾಡಲಿ ಎಂದು ಆಶಿಸೋಣ.
-ಕ.ವೆಂ.ನಾಗರಾಜ್.

4 ಕಾಮೆಂಟ್‌ಗಳು:

  1. ಪ್ರಸಕ್ತ ವೈಪರೀತ್ಯವನ್ನು ಸಮರ್ಥವಾಗಿ ಚಿತ್ರಿಸಿಕೊಟ್ಟಿದ್ದೀರಾ. ಅನುದಾನಗಳು ಸ್ವಿಸ್ ಖಾತೆಗೆ ನೇರವಾಗಿ ಜಮಾ ಆಗುವ ಪದ್ದತಿಯೂ ಬೇಗ ಬರಬಹುದು.

    ಪ್ರತ್ಯುತ್ತರಅಳಿಸಿ
  2. ಬದರೀನಾಥರೇ, ಫೇಸ್ ಬುಕ್ಕಿನಲ್ಲೂ ಹಂಚಿಕೊಂಡದ್ದಕ್ಕೆ ಮತ್ತು ಅರ್ಥಪೂರ್ಣ ಪ್ರತಿಕ್ರಿಯೆಗೆ ವಂದನೆಗಳು.

    ಪ್ರತ್ಯುತ್ತರಅಳಿಸಿ
  3. ಮೌಲ್ಯ ಭರಿತ ಚಿಂತನೆ, ಇಂತಹ ಯೋಜನೆಗಳು ದೇಶದ ಅಭಿವೃದ್ಧಿಯ ದಿಶೆಯನ್ನೇ ಬದಲಾಯಿಸಬಲ್ಲುವು...

    ಪ್ರತ್ಯುತ್ತರಅಳಿಸಿ
    ಪ್ರತ್ಯುತ್ತರಗಳು
    1. ಬದಲಾಗಲೆಂದು ಹಾರೈಸೋಣ, ನಮ್ಮ ಕೈಯಲ್ಲಾದ ಪ್ರಯತ್ನ ಮಾಡೋಣ. ಧನ್ಯವಾದ, ವಸಂತಕುಮಾರರೇ.

      ಅಳಿಸಿ