ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ಡಿಸೆಂಬರ್ 23, 2015

ಸಾಧನೆಯ ಹಾದಿ - 2


ನುಡಿದಂತೆ ನಡೆದು ಮಾದರಿಯು ತಾನಾಗೆ
ಪರರ ಮನವರಿತು ನಡೆವ ಕರುಣೆಯಿರಲಾಗೆ |
ಕರಗತವು ತಾನಾಗೆ ಕೆಲಸ ಮಾಡಿಪ ಕಲೆಯು
ನಾಯಕನು ಉದಯಿಸುವ ಕಾಣು ಮೂಢ ||
     ಈ ಘಟನೆಯ ಬಗ್ಗೆ ನೀವೂ ಕೇಳಿರಬಹುದು ಅಥವ ಓದಿರಬಹುದು. ಒಮ್ಮೆ ರಾಮಕೃಷ್ಣ ಪರಮಹಂಸರ ಹತ್ತಿರ ಒಬ್ಬ ತಾಯಿ ತನ್ನ ಮಗನನ್ನು ಕರೆದುಕೊಂಡು ಬಂದು, "ಪೂಜ್ಯರೇ, ನನ್ನ ಮಗನಿಗೆ ಜಿಲೇಬಿ ತಿನ್ನುವ ಚಪಲ ಜಾಸ್ತಿ. ಎಷ್ಟು ಕೊಟ್ಟರೂ ತಿನ್ನುತ್ತಾನೆ, ಮತ್ತೆ ಮತ್ತೆ ಕೇಳುತ್ತಾನೆ. ಅಷ್ಟೊಂದು ತಿಂದರೆ ಅವನ ಆರೋಗ್ಯ ಏನಾಗಬೇಕು? ನೀವು ಸ್ವಲ್ಪ ಬುದ್ಧಿ ಹೇಳಿ ಪೂಜ್ಯರೇ" ಎಂದು ಕೇಳಿಕೊಳ್ಳುತ್ತಾಳೆ. ರಾಮಕೃಷ್ಣರು ಆ ತಾಯಿಗೆ ಒಂದು ವಾರ ಬಿಟ್ಟು ಬರಲು ಹೇಳುತ್ತಾರೆ. ಒಂದು ವಾರದ ನಂತರದಲ್ಲಿ ಮತ್ತೆ ಕೆಲವು ದಿನಗಳು ಬಿಟ್ಟು ಬರಲು ಹೇಳುತ್ತಾರೆ. ಇದು ನಾಲ್ಕು-ಐದು ಸಲ ಮುಂದುವರೆಯುತ್ತದೆ. ಕೊನೆಗೆ ಒಂದು ದಿನ ರಾಮಕೃಷ್ಣರು ಮಗುವನ್ನು ಹತ್ತಿರ ಕರೆದು ಪ್ರೀತಿಯಿಂದ ತಲೆ ನೇವರಿಸುತ್ತಾ, "ಮಗು ತುಂಬಾ ಜಿಲೇಬಿ ತಿನ್ನುವುದು ಒಳ್ಳೆಯದಲ್ಲ. ಅಪರೂಪಕ್ಕೆ ಸ್ವಲ್ಪ ತಿನ್ನು. ಜಾಸ್ತಿ ತಿನ್ನಬೇಡ" ಎನ್ನುತ್ತಾರೆ. ಮಗುವಿಗೆ ಅವರು ಹೇಳಿದ ರೀತಿ ಒಪ್ಪಿಗೆಯಾಗುತ್ತದೆ. ಅದರಂತೆ ಪಾಲಿಸುತ್ತದೆ ಕೂಡಾ! ಆ ತಾಯಿಗೆ ಆಶ್ಚರ್ಯವಾಗುತ್ತದೆ. ಈ ಮಾತನ್ನು ಅವರು ಮೊದಲ ದಿನವೇ ಹೇಳಬಹುದಿತ್ತಲ್ಲಾ ಎಂದು ಮನಸ್ಸಿನಲ್ಲಿ ಅಂದುಕೊಂಡರೂ ಆಗ  ವಿಚಾರಿಸದೆ ಇನ್ನೊಂದು ದಿನ ತಾನೊಬ್ಬಳೇ ಬಂದಾಗ ಈ ಪ್ರಶ್ನೆ ಕೇಳಿಯೇಬಿಡುತ್ತಾಳೆ. ರಾಮಕೃಷ್ಣರು ನಗುತ್ತಾ ಹೇಳುತ್ತಾರೆ, "ತಾಯಿ, ನನಗೂ ಜಿಲೇಬಿ ಅಂದರೆ ಬಹಳ ಇಷ್ಟ. ಅದನ್ನು ತಿನ್ನಬೇಕೆಂಬ ಚಪಲದಿಂದ ಬಿಡಿಸಿಕೊಳ್ಳಲು ನನಗೆ ಅಷ್ಟು ಸಮಯ ಬೇಕಾಯಿತು." ದೊಡ್ಡವರ ರೀತಿಯೇ ಹಾಗೆ! ಇನ್ನೊಬ್ಬರಿಗೆ ಹೇಳುವ ಮುನ್ನ ಅದನ್ನು ತಾವು ಅನುಸರಿಸಿರಬೇಕು. ಅವರ ಅಂತರಂಗ ಮತ್ತು ಬಹಿರಂಗಗಳಲ್ಲಿ ಭಿನ್ನತೆ ಇಲ್ಲ. ಹೇಳುವುದೊಂದು ಮಾಡುವುದು ಮತ್ತೊಂದು ಅನ್ನುವುದು ಇಲ್ಲವೇ ಇಲ್ಲ. ಅಂತಹವರ ಮಾತಿನಲ್ಲಿ ಶಕ್ತಿ ಇರುತ್ತದೆ. ಆ ಶಕ್ತಿ ಹೊರಗಿನದಲ್ಲ. ಒಳಗಿನಿಂದ ಬಂದುದು. ಆ ಮಾತುಗಳನ್ನು ಕೇಳಿದವರು ಮಂತ್ರಮುಗ್ಧರಂತೆ ಅನುಸರಿಸುವುದಕ್ಕೆ ಇರುವ ವಿಶೇಷ ಕಾರಣವೇ ಇದಾಗಿದೆ.
ದ್ವೇಷವದು ದೂರ ಸರ್ವರಲಿ ಸಮಭಾವ
ಎಲ್ಲರಲು ಅಕ್ಕರೆ ಕರುಣೆಯಲಿ ಸಾಗರ |
ಮಮಕಾರವಿಲ್ಲ ಗರ್ವವದು ಮೊದಲಿಲ್ಲ
ಸಮಚಿತ್ತದವನೆ ನಿಜ ಸಾಧಕನು ಮೂಢ ||
     ಆದಿ ಶಂಕರಾಚಾರ್ಯ ವಿರಚಿತ ಸಾಧನಾಪಂಚಕ ಒಬ್ಬ ಸಾಧಕ ಹೇಗೆ ಇರಬೇಕೆಂಬುದನ್ನು ತಿಳಿಸುವ ಒಂದು ಅಪೂರ್ವ ರಚನೆ. ನಿತ್ಯ ವೇದಾಧ್ಯಯನ, ಮಾಡುವ ಕೆಲಸಗಳನ್ನು ಭಗವಂತನ ಆರಾಧನೆ ಎಂದು ಭಾವಿಸಿ ಮಾಡುವುದು, ಅಂತರಂಗದ ಕೊಳೆಯನ್ನು ತೊಡೆದು ಹಾಕುವುದು, ಮೋಹದ ಸಂಕೋಲೆಯಿಂದ ಹೊರಬರುವುದು, ಜ್ಞಾನಿಗಳ ಸತ್ಸಂಗ, ಯೋಗ್ಯ ಗುರುಗಳ ಆಶ್ರಯ, ವಿತಂಡ ವಾದಗಳಿಂದ ದೂರವಿರುವುದು, ಸಮಚಿತ್ತ ಹೊಂದುವುದು, ಇತ್ಯಾದಿಗಳು ಸಾಧಕನಿಗೆ ಇರಬೇಕೆಂದು ಅದು ಹೇಳುತ್ತದೆ.
ಹೊರಶುಚಿಯೊಡನೆ ಒಳಶುಚಿಯು ಇರಲು
ಮಾನಾಪಮಾನದಲುದಾಸೀನನಾಗಿರಲು |
ನಿರ್ಭಯತೆ ಮೇಳವಿಸೆನಿಸೆ ಸಮರ್ಥ
ದೇವಪ್ರಿಯನವನಲ್ಲದಿನ್ಯಾರು ಮೂಢ ||
     'ಅಬ್ಬಬ್ಬಾ, ಸಾಧಕರಾಗುವುದು ಇಷ್ಟೊಂದು ಕಷ್ಟವೇ! ಇನ್ನೂ ಏನಾದರೂ ಇದೆಯೋ?' ಎಂಬ ಪ್ರಶ್ನೆ ಮೂಡುತ್ತದೆ. 'ಹೌದು, ಇನ್ನೂ ಇದೆ' ಎಂಬುದು ಸಾಧಕರ ನಡೆ-ನುಡಿಗಳನ್ನು ಕಂಡವರಿಗೆ ಅರಿವಾಗದೇ ಇರದು. ಅವರು 'ತಾನೇ ಸರಿ, ತನ್ನದೇ ಸರಿ' ಅನ್ನುವುದಿಲ್ಲ. ಒಂದು ಪುಟ್ಟ ಮಗುವೂ ಏನನ್ನೋ ಹೇಳುತ್ತಿದ್ದರೂ ಅದನ್ನೂ ಬೆರಗಾಗಿ ಕಣ್ಣರಳಿಸಿ ಕೇಳುವ ಆ ತನ್ಮಯತೆ ಸಾಧಕರಿಗಲ್ಲದೆ ಬೇರೆ ಯಾರಿಗೆ ಬಂದೀತು! ಎಲ್ಲವನ್ನೂ 'ಕೇಳುವ' ಆ ಗುಣ ಅನನ್ಯ. ಅವರು ಮೇಲು, ಇವರು ಕೀಳು, ಅವನು ಬಡವ, ಇವನು ಶ್ರೀಮಂತ, ಇತ್ಯಾದಿ ತಾರತಮ್ಯ ಮಾಡುವುದಿಲ್ಲ. ಎಂತಹ ಸ್ಥಿತಿಯಲ್ಲೂ ಆನಂದ ಕಾಣುವ ಗುಣ, ಆಸೆ, ಆಮಿಷಗಳಿಂದ ಮೈಮರೆತು ದಾರಿ ತಪ್ಪದ ನಡತೆ, ಅಪಾಯವನ್ನೆದುರಿಸುವ ಗಟ್ಟಿತನ, ಹೀನ-ದೀನರ ಸೇವೆಯನ್ನು ದೇವರ ಪೂಜೆಯೆಂದು ಭಾವಿಸುವ ಉದಾತ್ತತೆ, ಸರಳತೆ, ನಿಷ್ಕಾಮ ಕರ್ಮ, ಅಚಲ ವಿಶ್ವಾಸ, ಹೊರಮನದ ಕೋರಿಕೆಗಳನ್ನು ಅಲ್ಲಗಳೆದು ಒಳಮನದ ಕರೆಯನ್ನು ಆಲಿಸಿ ಅದರಂತೆ ಜೀವಿಸುವ ಕಲೆ ಸಾಧಕರ ಅಮೂಲ್ಯ ಸಂಪತ್ತು. ಇಷ್ಟೆಲ್ಲಾ ಇದ್ದ ಮೇಲೆ, ಅವರು ದೇವರೇ ಸರಿ, ಸಾಮಾನ್ಯ ಮನುಷ್ಯರಲ್ಲವೇ ಅಲ್ಲ, ಸಾಮಾನ್ಯರು ಹೀಗಿರಲು ಸಾಧ್ಯವೇ ಇಲ್ಲ ಎಂದು ನಿರ್ಧರಿಸಿ ಅವರನ್ನು ಆರಾಧಿಸಲು ಪ್ರಾರಂಭಿಸಿಬಿಡುತ್ತೇವೆ. ಇಂದು ಅನೇಕ ಸಾಧು-ಸಂತ-ಮಹಾಂತರ ಗುಡಿಗಳನ್ನು ಕಟ್ಟಿ ನಿತ್ಯ ಪೂಜೆ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ. ಹಾಗೆ ಪೂಜಿಸುವವರದೇ ಒಂದು ಪಂಥವಾಗಿ ಬಿಡುತ್ತದೆ. ಹೊಸ ಹೊಸ ರೀತಿ-ನೀತಿಗಳು, ಕಟ್ಟಳೆಗಳು, ಸಂಪ್ರದಾಯಗಳು ರೂಢಿಗೆ ಬಂದುಬಿಡುತ್ತವೆ. ಅವರನ್ನು ಆರಾಧಿಸುವುದು ತಪ್ಪೇ, ಪೂಜಿಸಬಾರದೇ ಎಂದು ಸಿಟ್ಟಾಗದಿರಿ. ನಮಗೆ ಯೋಗ್ಯ ಮಾರ್ಗದರ್ಶನ ಮಾಡಿದವರನ್ನು, ಮಾಡುವವರನ್ನು ಆರಾಧಿಸುವುದು ತಪ್ಪಲ್ಲವೇ ಅಲ್ಲ. ಅದರೆ ಅದರಲ್ಲಿ ಒಂದು ಅಪಾಯವಿದೆ. ಅಂತಹ 'ಪೂಜ್ಯ'ರುಗಳನ್ನು 'ಹೊರಗೆ' ಇಟ್ಟುಬಿಡುವುದೇ ಆ ಅಪಾಯ. ಸಾಷ್ಟಾಂಗ ನಮಸ್ಕಾರ ಮಾಡಿ, ಆರತಿ ಬೆಳಗಿ, ತೀರ್ಥ-ಪ್ರಸಾದಗಳನ್ನು ಪಡೆದು ಕೃತಕೃತ್ಯರಾದೆವೆಂದು ಅಂದುಕೊಂಡುಬಿಡುತ್ತೇವೆ. ವಿಚಾರ ಮಾಡೋಣ. ಹೃದಯ ಮಂದಿರಗಳಲ್ಲಿ ಅವರನ್ನು ಪ್ರತಿಷ್ಠಾಪಿಸಿ ಮಾಡುವ ಪೂಜೆಯೇ ನಿಜವಾದ ಪೂಜೆ. ಅವರು ತೋರಿದ ಹಾದಿಯಲ್ಲಿ ನಡೆಯುವುದೇ ಅವರಿಗೆ ಸಲ್ಲಿಸಬಹುದಾದ ಯೋಗ್ಯ ಗುರುಕಾಣಿಕೆ. ಹಾಗೆ ನಡೆದು ಮಾಡುವ ಸಾಧನೆಯೇ ಪೂಜಾಫಲ ಎಂಬುದನ್ನು ಅರಿಯೋಣ.
-ಕ.ವೆಂ.ನಾಗರಾಜ್.
**************
ದಿನಾಂಕ 2.11.2015ರ ಜನಮಿತ್ರ ಪತ್ರಿಕೆಯ 'ಚಿಂತನ' ಅಂಕಣದಲ್ಲಿ ಪ್ರಕಟಿತ:

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ