ಒಂದೆರಡು ವರ್ಷಗಳ ಹಿಂದೆ ಬೆಂಗಳೂರಿನ ವಿ.ಆರ್. ಭಟ್ ಎನ್ನುವವರು ವಿವಾದಗಳಿಂದಲೇ ಪ್ರಸಿದ್ಧರಾದ ಪ್ರಭಾ ಬೆಳವಂಗಲರ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಟೀಕಿಸಿದ್ದರೆಂದು ಪ್ರಭಾ ಮತ್ತು ಅವರ ಬೆಂಬಲಿಗರು ದೊಡ್ಡ ಹಗರಣವನ್ನಾಗಿಸಿ, ಮುಖ್ಯಮಂತ್ರಿಗಳ ಸಲಹೆಗಾರರೇ ಅವರ ಬೆನ್ನಿಗೆ ನಿಂತು, ಭಟ್ಟರನ್ನು ಗೂಂಡಾ ಕಾಯಿದೆಯನ್ವಯ ಬಂಧಿಸುವಲ್ಲಿ ಅಂತ್ಯವಾಗಿತ್ತು. ಆವೇಶದಲ್ಲಿ ಮಾಡಿದ್ದ ಟೀಕೆಯೊಂದು ಅವರನ್ನು ಜೈಲಿಗೆ ದೂಡಿತ್ತು. ಈಗ ಸ್ವತಃ ಪ್ರಭಾ ಬೆಳವಂಗಲರವರೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಬಗ್ಗೆ ಅಶ್ಲೀಲ ಚಿತ್ರ ಪ್ರಕಟಿಸಿ, ಟೀಕೆ ಮಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಅವರನ್ನೂ ಪ್ರಕರಣ ದಾಖಲಿಸಿ ಬಂಧಿಸಲು ಜಾಲತಾಣಗಳಲ್ಲಿ ಪ್ರಬಲ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಗಾಜಿನ ಮನೆಯಲ್ಲಿರುವವರು ಇನ್ನೊಬ್ಬರ ಮನೆಯ ಮೇಲೆ ಕಲ್ಲೆಸೆಯಬಾರದೆಂಬ ಅರಿವು ಮರೆವಾಗಿ ಅವರು ತೊಂದರೆಗೆ ಸಿಲುಕಿಕೊಂಡಿದ್ದಾರೆ. ವೈಚಾರಿಕ ಅಸಹನೆಗಳು ವೈಚಾರಿಕವಾಗಿ ಸಭ್ಯವಾಗಿ ಚರ್ಚಿಸಲ್ಪಡಬೇಕೇ ಹೊರತು ಕೀಳು ಮಟ್ಟಕ್ಕೆ ಇಳಿಯಬಾರದೆಂಬುದಕ್ಕೆ ಇದು ಎಲ್ಲರಿಗೂ ಪಾಠವಾಗಬೇಕು. ಸದಾ ಒಂದಿಲ್ಲೊಂದು ವಿವಾದಕ್ಕೆ ಕಾರಣರಾಗುತ್ತಿರುವ ಪ್ರಭಾರವರ ಭೂತವೇ ಅವರನ್ನು ವರ್ತಮಾನದಲ್ಲಿ ಕಾಡುತ್ತಿದೆ.
ಸಾಂದರ್ಭಿಕವಾಗಿ ಇದನ್ನು ಉದಾಹರಿಸಿದ್ದರೂ ನಾನು ಹೇಳಹೊರಟಿರುವುದು ಭೂತದ ಚೇಷ್ಟೆ ಮತ್ತು ಕಾಟಗಳ ಬಗ್ಗೆ. ಹಿಂದೆ ನಡೆದ ಪೇಚಿನ ಪ್ರಸಂಗಗಳು, ಅವಮಾನಿತರಾಗುವ ಪ್ರಸಂಗಗಳು, ಒಟ್ಟಾರೆಯಾಗಿ ಹೇಳಬೇಕೆಂದರೆ ಕೆಟ್ಟ ಮತ್ತು ಕಹಿ ಘಟನೆಗಳು ಸಾಮಾನ್ಯವಾಗಿ ಭೂತವಾಗಿ ಕಾಡುತ್ತವೆ. ಅವನಿ(ಳಿ)ಗೆ ಭೂತ ಮೆಟ್ಟಿಕೊಂಡಿದೆ ಎಂಬಂತಹ ಮಾತುಗಳನ್ನು ಕೇಳುತ್ತಿರುತ್ತೇವೆ. ನಿಜವಾಗಿ ನೋಡಿದರೆ ಮೆಟ್ಟಿಕೊಂಡಿರುವುದು ಹೊರಗಿನ ಭೂತವಲ್ಲ, ಒಳಗಿನ ಭೂತವೇ ಆಗಿರುತ್ತದೆ. ಒಬ್ಬರೇ ತಮ್ಮಷ್ಟಕ್ಕೆ ತಾವೇ ಗುಣುಗುಣಿಸುತ್ತಾ ಹೋಗುವವರು, ಏನನ್ನೋ ನೆನೆಸಿಕೊಂಡು ತಮ್ಮಷ್ಟಕ್ಕೆ ತಾವೇ ನಗುವವರು, ಅಳುವವರು ಮುಂತಾದವರು ಇಂತಹ ಭೂತಚೇಷ್ಟೆಗೆ ಒಳಗಾದವರೇ!
ಭೂತ ಎಂದಾಕ್ಷಣ ದೆವ್ವ, ಪ್ರೇತ, ಪಿಶಾಚಿ, ಇತ್ಯಾದಿಗಳ ಕಲ್ಪನೆಯ ರೂಪ ಕಣ್ಣು ಮುಂದೆ ಬರುತ್ತದೆ. ಆದರೆ ವಾಸ್ತವಿಕವಾಗಿ ಭೂತ ಎಂದರೆ ಹಿಂದೆ ನಡೆದದ್ದು ಎಂದು ಅರ್ಥ. ಹಾಗಾದರೆ ಈ ಭೂತ ಕಾಡುವುದು ಅಂದರೆ? ನಾವು ಸಾಮಾನ್ಯವಾಗಿ ವರ್ತಮಾನದಲ್ಲಿರುವುದು ಕಡಿಮೆ. ಒಂದೋ, ಕಳೆದುಹೋದ ಸಂಗತಿಗಳ ಬಗ್ಗೆ ಚಿಂತಿತರಾಗಿರುತ್ತೇವೆ, ಮುಳುಗಿಹೋಗಿರುತ್ತೇವೆ ಅಥವ ಮುಂದೆ ಆಗಬಹುದಾದ ಭವಿಷ್ಯತ್ತಿನ ವಿಷಯಗಳ ಕುರಿತು ಕಲ್ಪನೆ, ಊಹಾಪೋಹಗಳಲ್ಲಿ ಕಳೆದುಹೋಗಿರುತ್ತೇವೆ. ಕಳೆದುಹೋದ ಸಂಗತಿಗಳ ಬಗ್ಗೆ ಚಿಂತಿತರಾಗಿರುವದೇ ಭೂತ ನಮ್ಮನ್ನು ಕಾಡುವುದು ಎಂದು ತಿಳಿಯಬೇಕು. ಕಳೆದುಹೋದುದನ್ನು ಸರಿಪಡಿಸಲಾಗುವುದಿಲ್ಲ. ಕಾಲವನ್ನು ಹಿಂದಕ್ಕೆ ತಿರುಗಿಸಲು ಸಾಧ್ಯವೇ? ಹೀಗಿರುವಾಗ ಹಿಂದಿನ ಸಂಗತಿಗಳ ಕುರಿತು ತಲೆ ಕೆಡಿಸಿಕೊಳ್ಳುವುದೇ ಭೂತಚೇಷ್ಠೆ. ಹಿಂದಿನ ಸಂಗತಿಗಳಿಂದ ಪಾಠ ಕಲಿಯದೆ ಅದನ್ನು ಕುರಿತೇ ಯೋಚಿಸಿ ಮನಸ್ಸು ಕೆಡಿಸಿಕೊಳ್ಳುವುದೇ ಭೂತದ ಕಾಟ. ವರ್ತಮಾನದಲ್ಲಿ ಹೇಗಿರಬೇಕು ಎಂಬ ಬಗ್ಗೆ ಜಾಗೃತರಾಗಿರಬೇಕೇ ಹೊರತು, ಏನೂ ಮಾಡಲು ಸಾಧ್ಯವಿಲ್ಲದ ಭೂತಕಾಲದ ಬಗ್ಗೆ ಚಿಂತಿಸದೆ, ಬದಲಾಯಿಸಲು ಆಗದ ಅದನ್ನು ಹೇಗಿದೆಯೋ ಹಾಗಿ ಒಪ್ಪಿಕೊಂಡು ಸುಮ್ಮನಿರಬೇಕು. ಭವಿಷ್ಯತ್ತಿನ ಬಗ್ಗೆಯೂ ಚಿಂತಿಸುವುದು ತರವಲ್ಲ. ಏಕೆಂದರೆ ಅದು ನಿರ್ಭರವಾಗಿರುವುದು ವರ್ತಮಾನದ ನಮ್ಮ ನಡೆನುಡಿಗಳಿಂದ ಮಾತ್ರ.
ಹೊರಗಣ್ಣು ತೆರೆದಿರಲು ಬೀಳುವ ಭಯವಿಲ್ಲ
ಒಳಗಣ್ಣು ತೆರೆದಿರಲು ಪತನದ ಭಯವಿಲ್ಲ |
ತಪ್ಪೊಪ್ಪಿ ನಡೆವವರು ಹಿರಿಯರೆಂದೆನಿಸುವರು
ತಪ್ಪೆ ಸರಿಯೆಂದವರು ಜಾರುವರು ಮೂಢ ||
ಜೀವನದಲ್ಲಿ ಮಾಡುವ ತಪ್ಪುಗಳು ಭೂತವಾಗಿ ಕಾಡುತ್ತವೆ. ತಪ್ಪುಗಳು ಜೀವನದಲ್ಲಿ ಸರಿಯಾಗಿ ಹೇಗೆ ಮುನ್ನಡೆಯಬೇಕೆಂಬುದನ್ನು ಕಲಿಸುವ ಗುರುಗಳು. ಈಜು ಕಲಿಯಬೇಕಾದರೆ ಮೊದಲು ತಪ್ಪು ಮಾಡುತ್ತೇವೆ. ಆ ತಪ್ಪು ಮಾಡದಿರಲು ಹೋಗಿ ಬೇರೆ ತಪ್ಪುಗಳನ್ನು ಮಾಡುತ್ತೇವೆ. ಕೊನೆಗೆ ಎಲ್ಲಾ ತಪ್ಪುಗಳನ್ನು ಮಾಡಿ, ಹಲವು ತಪ್ಪುಗಳನ್ನು ಪದೇ ಪದೇ ಮಾಡುತ್ತಾ ಮುಳುಗದಿರುವಂತೆ ನೋಡಿಕೊಂಡು ಈಜು ಕಲಿತುಬಿಡುತ್ತೇವೆ. ಈ ಜೀವನವೂ ಈಜುವುದನ್ನು ಕಲಿಯುವ ಹಾಗೇನೇ! ಹಲವಾರು ತಪ್ಪುಗಳನ್ನು ಮಾಡುತ್ತೇವೆ, ಪಾಠ ಕಲಿಯುತ್ತೇವೆ. ಹೇಗೆ ಬದುಕಬೇಕೆಂಬುದಕ್ಕೆ ಬೇರೆ ದಾರಿಯಿಲ್ಲ. ತಪ್ಪುಗಳನ್ನು ಮಾಡುತ್ತಾ, ಪೆಟ್ಟು ತಿನ್ನುತ್ತಾ ಬದುಕುವುದನ್ನು ಕಲಿಯಬೇಕಾಗುತ್ತದೆ. ಪರಿಪೂರ್ಣವಾಗಿರುವುದಕ್ಕಿಂತ ಹೆಚ್ಚು ಮೌಲ್ಯಯುತವಾದುದನ್ನು ತಪ್ಪುಗಳು ಕಲಿಸುತ್ತವೆ.
ಭೂತಗಳು ಕಾಡದಿರಲು ಏನು ಮಾಡಬೇಕು? ಹಿಂದಿನದನ್ನು ಮರುಮಾತಾಡದೆ ಒಪ್ಪಿಕೊಂಡುಬಿಡಬೇಕು. ಹಿಂದಿನ ನಮ್ಮ ಮತ್ತು ಇತರರ ತಪ್ಪುಗಳನ್ನು ಮರೆತು ಕ್ಷಮಿಸಿ, ಆ ತಪ್ಪುಗಳಿಂದ ಪಾಠಗಳನ್ನು ಕಲಿತು, ಅವನ್ನು ನಮ್ಮ ಮುಂದಿನ ಯಶಸ್ಸಿಗೆ ಮೆಟ್ಟಿಲುಗಳನ್ನಾಗಿಸಿಕೊಳ್ಳಬೇಕು. ನಮಗೆ ಎರಡು ಅವಕಾಶಗಳಿರುತ್ತವೆ: ತಪ್ಪುಗಳಿಂದ ಪಾಠ ಕಲಿಯಬೇಕು ಅಥವ ಸಮಸ್ಯೆಗಳಿಂದ ಓಡಿಹೋಗಬೇಕು. ಭೂತದ ಕಾಟ ಬೇಡವೆಂದರೆ ಮೊದಲನೆಯದನ್ನು ಆರಿಸಿಕೊಳ್ಳಬೇಕು. ಇಂದು ನಾಳೆಗೆ ಭೂತವಾಗುವುದರಿಂದ ಇಂದು ಸರಿಯಾಗಿರುವಂತೆ ಎಚ್ಚರದಿಂದಿರಬೇಕು. ಬುದ್ಧಿವಂತರು ಇತರರ ತಪ್ಪುಗಳಿಂದ ಕಲಿತುಕೊಳ್ಳುತ್ತಾರಾದರೆ, ದಡ್ಡರು ತಮ್ಮದೇ ತಪ್ಪುಗಳಿಂದ ಪಾಠ ಕಲಿಯುತ್ತಾರೆ. ತಪ್ಪುಗಳು ನಾವು ಏನನ್ನು ಕಲಿಯಬೇಕಿದೆ ಎಂಬುದನ್ನು ತೋರಿಸುತ್ತವೆ. ಈ ಜೀವನವೇ ಅಂತಹದು, ಚಿತ್ರ ವಿಚಿತ್ರ ಸನ್ನಿವೇಶಗಳನ್ನು ಎದುರಿಸಬೇಕಾಗುತ್ತದೆ. ಕಳ್ಳನನ್ನು ಕಳ್ಳ ಎಂದರೆ ಅವನಿಗೆ ಏನೂ ಅನ್ನಿಸುವುದಿಲ್ಲ. ಸುಳ್ಳನನ್ನು, ಲಂಪಟನನ್ನು ಸುಳ್ಳ, ಲಂಪಟ ಎಂದರೆ ಬೇಸರವಾಗುವುದಿಲ್ಲ. ಕಳ್ಳ, ಸುಳ್ಳ, ಲಂಪಟರಲ್ಲದವರು ಸುಖಾಸುಮ್ಮನೆ ಇಂತಹ ಅಪವಾದಗಳಿಗೆ ಒಳಗಾದರೆ ವರ್ಣನಾತೀತ ನೋವನ್ನು ಅನುಭವಿಸುತ್ತಾರೆ. ನಿಧಾನವಾಗಿ ಯೋಚಿಸಿದರೆ, ಇದೂ ಒಂದು ರೀತಿಯಲ್ಲಿ ಭೂತದ ಕಾಟವೇ ಆಗಿರುತ್ತದೆ. ಹಿಂದಿನ ಯಾವುದೋ ಘಟನೆಗಳು, ಸಂಗತಿಗಳು, ವೈಯಕ್ತಿಕ ದ್ವೇಷಗಳು ಈ ರೀತಿಯ ಸುಳ್ಳು ಆಪಾದನೆಗಳಿಗೆ ಪ್ರೇರಣೆಯಾಗಿರುತ್ತವೆ. ತಮಗೆ ಆಗದವರ ಪ್ರತಿಯೊಂದು ನಡೆಯೂ ತಪ್ಪಾಗಿ ಗೋಚರಿಸುವುದರ ಫಲ ಇಂತಹ ಆಪಾದನೆಗಳು. ಆಗುವ ನೋವು, ನಿರಾಶೆ, ಹತಾಶೆಗಳನ್ನು ತಮಗೆ ಬೇಕಾದವರೊಂದಿಗೆ ಹಂಚಿಕೊಂಡು ಹಗುರವಾಗಬಹುದು. ಹೀಗೆ ಮಾಡುವುದು ಎಲ್ಲಾ ಸಂದರ್ಭಗಳಲ್ಲೂ ಸರಿಯಾಗಲಾರದು. ಅವರಿಂದ ಅನುಕಂಪ ಸಿಗಬಹುದು. ಪರಿಹಾರ ಸಿಗದು ಎಂಬಂತಹ ಸಂಗತಿಗಳನ್ನು ಹಂಚಿಕೊಳ್ಳದಿರುವುದೇ ಒಳಿತು. ನೋವಿನ ತೀವ್ರತೆ ಕಡಿಮೆಯಾಗಬೇಕೆಂದರೆ ಮನಸ್ಸಿಗೆ ತಿಳುವಳಿಕೆ ಹೇಳಬೇಕಾಗುತ್ತದೆ: ನೋಡು, ಅವರು ಏನು ಹೇಳಿದರು, ಏನು ಮಾಡಿದರು ಎಂಬ ಬಗ್ಗೆ ತಲೆ ಕೆಡಿಸಿಕೊಳ್ಳಬೇಡ, ಮರೆತುಬಿಡು. ನಿನ್ನನ್ನು ಅಲಕ್ಷ್ಯಿಸಿದ, ಅವಮಾನಿಸಿದ ಸಂಗತಿಗಳನ್ನು ಮನಸ್ಸಿನಿಂದ ತೆಗೆದುಹಾಕಿಬಿಡು. ನೀನು ಸರಿಯಾಗಿರುವೆ ಎಂದು ನಿನಗೆ ಗೊತ್ತಿದ್ದರೆ ಅಷ್ಟು ಸಾಕು. ನಿನ್ನ ಕುರಿತ ಅವರ ಭಾವನೆಗಳು ಬದಲಾಗುವುದೇ ಇಲ್ಲವೆನಿಸಿದರೆ ಅವರನ್ನು ಮರೆತುಬಿಡು. ನೋಯುತ್ತಿರುವುದು ನಿನ್ನ ಹೃದಯ. ನೀನೇ ಸಂತಯಿಸಿಕೋ. ಅಳುತ್ತಿರುವುದು ನಿನ್ನ ಕಣ್ಣು. ನೀನೇ ಒರೆಸಿಕೋ.. ಜೀವ ನಿನ್ನದು, ಜೀವನ ನಿನ್ನದು. ನಿನ್ನ ಆತ್ಮ ಒಪ್ಪುವಂತೆ ಜೀವಿಸು. ತಪ್ಪಿದ್ದರೆ ಸರಿಪಡಿಸಿಕೋ. ತಪ್ಪಿಲ್ಲದಿದ್ದರೆ ಚಿಂತಿಸಬೇಡ. ಎದ್ದು ನಿಲ್ಲು. ಮುಂದೆ ನಡೆ, ಎಲ್ಲರಿಗೂ ನೀನು ಏನು ಎಂಬುದನ್ನು ತೋರಿಸು. ಆತ್ಮಾವಲೋಕನ ಮಾಡಿಕೊಂಡು, ಭೂತಕಾಲದ ತಪ್ಪುಗಳಿಂದ ಪಾಠ ಕಲಿತು, ವರ್ತಮಾನದಲ್ಲಿ ಸರಿಯಾಗಿ ನಡೆದರೆ ಯಾವ ಭೂತಕಾಟವೂ ನಮ್ಮನ್ನು ಕಾಡಿಸದು. ಭವಿಷ್ಯತ್ತೂ ಸುಂದರವಾಗಿರುವುದು. ದುರ್ಬಲತೆಗಳ ಅರಿವಿರುವವರು ಬಲಶಾಲಿಯಾಗುವರು; ಲೋಪಗಳನ್ನು ಒಪ್ಪಿಕೊಳ್ಳುವವರು ಒಳ್ಳೆಯವರೆನಿಸುವರು; ತಪ್ಪುಗಳನ್ನು ತಿದ್ದಿಕೊಂಡು ನಡೆವವರು ಬುದ್ಧಿವಂತರೆನಿಸುವರು.
-ಕ.ವೆಂ.ನಾಗರಾಜ್.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ